ದೇಶದ ಆರ್ಥಿಕ ಸಂಕಷ್ಟದ ಬಗ್ಗೆ ರಾಹುಲ್ ಮೊದಲೇ ಎಚ್ಚರಿಸಿದ್ದರು: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕಲಬುರಗಿ ದೇಶದ ಆರ್ಥಿಕ ಪರಿಸ್ಥಿತಿ ಸಂಕಷ್ಟದತ್ತ ಸಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೊದಲೇ ಎಚ್ಚರಿಸಿದ್ದರು. ಆದರೆ ಆ ಸಂದರ್ಭದಲ್ಲಿ ಯಾರೂ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ಟೀಕಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ತೈಲ ಬಿಕ್ಕಟ್ಟಿನ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ತೈಲ ಮಿತಬಳಕೆಗೆ ಕರೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಮಾತನಾಡಿದ ಅವರು, ದೇಶದ ಇಂದಿನ ಪರಿಸ್ಥಿತಿಗೆ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
“ದೇಶವನ್ನು ಈ ಸ್ಥಿತಿಗೆ ತಂದವರು ಯಾರು? ಬಿಜೆಪಿ ನಾಯಕರು ನಾಲ್ಕು ಜನ ಎಸ್ಕಾರ್ಟ್ ವಾಹನ ಕಡಿಮೆ ಮಾಡಿದರೆ ದೇಶದ ಸಮಸ್ಯೆ ಪರಿಹಾರವಾಗುತ್ತದೆಯೇ?” ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಇಷ್ಟು ದಿನ ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಹೇಳುತ್ತಿದ್ದ ಪ್ರಧಾನಿ ಮೋದಿ ಈಗ ಪರಿಸ್ಥಿತಿ ಗಂಭೀರವಾಗಿದೆ ಎಂದು ಹೇಳುತ್ತಿರುವುದು ಏಕೆ ಎಂದು ಕಿಡಿಕಾರಿದರು.
ಪ್ರಧಾನಿಯವರು ಜಾಗತಿಕ ಆರ್ಥಿಕ ಸಂಕಷ್ಟದ ಬಗ್ಗೆ ಮೊದಲೇ ಸಂಸತ್ತಿನಲ್ಲಿ ಹಾಗೂ ಜನರ ಮುಂದೆ ಸ್ಪಷ್ಟನೆ ನೀಡಬೇಕಿತ್ತು. ಈಗ ತೈಲ ಬಳಕೆ ಕಡಿಮೆ ಮಾಡುವಂತೆ ಮನವಿ ಮಾಡುತ್ತಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
“ನಾವು ಮೋದಿ ಹೇಳುವುದಕ್ಕೂ ಮುಂಚೆಯೇ ವಾರದಲ್ಲಿ ಒಂದು ದಿನ ಮೆಟ್ರೋದಲ್ಲಿ ಪ್ರಯಾಣ ಮಾಡುತ್ತಿದ್ದೇವೆ. ಆದರೆ ಸರ್ಕಾರಕ್ಕೆ ಒಳ್ಳೆಯ ಸುದ್ದಿ ಇದ್ದಾಗ ಮಾತ್ರ ರಾತ್ರಿ ಎಂಟು ಗಂಟೆಗೆ ಟಿವಿ ಮುಂದೆ ಬಂದು ಹೇಳುತ್ತಾರೆ. ಸಮಸ್ಯೆ ಗಂಭೀರವಾಗಿರುವುದನ್ನು ಜನರಿಗೆ ಮೊದಲೇ ಯಾಕೆ ತಿಳಿಸಲಿಲ್ಲ?” ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.



