ತಪ್ಪಿತಸ್ಥರಿಗೆ ಕಠಿಣಾತಿ ಕಠಿಣ ಶಿಕ್ಷೆ ಖಚಿತ: ನೀಟ್ ಪೇಪರ್ ಲೀಕ್ ಪ್ರಕರಣಕ್ಕೆ ಪ್ರಧಾನಿ ಮೋದಿ ಖಡಕ್ ಎಚ್ಚರಿಕೆ
ನವದೆಹಲಿ: ನೀಟ್ ಪೇಪರ್ ಲೀಕ್ ಪ್ರಕರಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಗಂಭೀರ ಕಳವಳ ವ್ಯಕ್ತಪಡಿಸಿದ್ದು, ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ತಪ್ಪಿತಸ್ಥರಿಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಎನ್ಡಿಎ ಸಂಸದೀಯ ಪಕ್ಷದ ‘ಮಂಗಲ್ ಮಿಲನ್’ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ನೀಟ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿದ್ದಾರೆ. ಸಭೆಯ ಬಳಿಕ ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯವರ ಮಾತುಗಳನ್ನು ಮಾಧ್ಯಮಗಳಿಗೆ ವಿವರಿಸಿದರು.
ನೀಟ್ ಪೇಪರ್ ಲೀಕ್ ಪ್ರಕರಣ ಬೆಳಕಿಗೆ ಬಂದ ತಕ್ಷಣವೇ ಸರ್ಕಾರ ತ್ವರಿತ ಕ್ರಮ ಕೈಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಲಾಗಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗದಂತೆ ಮರುಪರೀಕ್ಷೆಯನ್ನು ಯಾವುದೇ ವಿಳಂಬವಿಲ್ಲದೆ ನಡೆಸಲಾಗಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯುವುದು ಹಾಗೂ ಪಾರದರ್ಶಕ ಮತ್ತು ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆಯನ್ನು ರೂಪಿಸುವುದು ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಅದು ಪ್ರತಿಯೊಬ್ಬರ ರಾಷ್ಟ್ರೀಯ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಒತ್ತಿಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ತರಲು ಅಗತ್ಯವಾದ ಶಾಸನಾತ್ಮಕ ಕ್ರಮಗಳಿಗೆ ಎನ್ಡಿಎ ಮೈತ್ರಿಕೂಟದ ಎಲ್ಲ ಪಾಲುದಾರರು ಒಗ್ಗಟ್ಟಿನಿಂದ ಬೆಂಬಲ ನೀಡಬೇಕು ಎಂದು ಪ್ರಧಾನಿ ಮನವಿ ಮಾಡಿದ್ದಾರೆ.
ಇದೇ ವೇಳೆ ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇದ್ದರೂ, ದೇಶದ ಯುವಜನರ ಭವಿಷ್ಯ ಮತ್ತು ಅವರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಸಂಸದರು ಸಂಸತ್ತಿನಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವಿರೋಧ ಪಕ್ಷಗಳಿಗೂ ಮನವಿ ಮಾಡಿದ್ದಾರೆ.



