No menu items!
26.2 C
Munich
Wednesday, August 12, 2026

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಕಾನೂನು ಸಂಕಷ್ಟ: ಡಿಫಾಲ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

Must read

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಕಾನೂನು ಸಂಕಷ್ಟ: ಡಿಫಾಲ್ಟ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕಾನೂನು ಹೋರಾಟದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಮಹಿಳೆಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಡಿಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ, “ಈ ಪ್ರಕರಣದಲ್ಲಿ ಜಾಮೀನು ಮಂಜೂರಾದರೂ ಪ್ರಜ್ವಲ್ ರೇವಣ್ಣ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಿಲ್ಲ” ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಡಿಫಾಲ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ ಪ್ರಜ್ವಲ್ ಪರ ವಕೀಲರು, ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ ಇನ್ನೂ ಆಕ್ಷೇಪಣೆ ಸಲ್ಲಿಸಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಈ ಪ್ರಕರಣದಲ್ಲಿ ಪ್ರಮುಖ ಕಾನೂನಾತ್ಮಕ ಪ್ರಶ್ನೆಯೊಂದು ಉದ್ಭವಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.
ಪ್ರಜ್ವಲ್ ರೇವಣ್ಣ ಅವರು ಈಗಾಗಲೇ ಮತ್ತೊಂದು ಪ್ರತ್ಯೇಕ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವುದರಿಂದ, ಪ್ರಸ್ತುತ ವಿಚಾರಣೆಯಲ್ಲಿರುವ ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಜಾಮೀನು ದೊರೆತರೂ ಅವರು ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.
ಈ ಕಾನೂನಾತ್ಮಕ ಮತ್ತು ತಾಂತ್ರಿಕ ಅಂಶವನ್ನು ಮುಂದಿನ ವಿಚಾರಣೆಯಲ್ಲಿ ಸವಿಸ್ತಾರವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದ ನ್ಯಾಯಾಲಯ, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿತು.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಹಲವು ಲೈಂಗಿಕ ದೌರ್ಜನ್ಯ ಪ್ರಕರಣಗಳ ವಿಚಾರಣೆ ವಿವಿಧ ನ್ಯಾಯಾಲಯಗಳಲ್ಲಿ ಮುಂದುವರಿದಿದ್ದು, ಈ ಮಧ್ಯೆ ಡಿಫಾಲ್ಟ್ ಜಾಮೀನು ಅರ್ಜಿಯ ಕುರಿತ ಹೈಕೋರ್ಟ್ನ ಈ ಅಭಿಪ್ರಾಯ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.

- Advertisement -spot_img

More articles

- Advertisement -spot_img

Latest article