ಮತದಾರರ ಗುರುತಿನ ಚೀಟಿ ಪ್ರಕರಣ: ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ವಾರಂಟ್
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ಮತದಾರರ ಗುರುತಿನ ಚೀಟಿ ಸಂಬಂಧಿತ ಪ್ರಕರಣದಲ್ಲಿ ಕಾನೂನು ಸಂಕಷ್ಟ ಎದುರಾಗಿದೆ. ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್ಬಿಡಬ್ಲ್ಯು) ಜಾರಿಗೊಳಿಸಿದೆ.
ದೇಶದ ಚುನಾವಣಾ ನಿಯಮಗಳ ಪ್ರಕಾರ ಒಬ್ಬ ವ್ಯಕ್ತಿ ಕೇವಲ ಒಂದು ಮತದಾರರ ಗುರುತಿನ ಚೀಟಿಯನ್ನು ಮಾತ್ರ ಹೊಂದಿರಬಹುದು. ಆದರೆ ಪ್ರಕಾಶ್ ರಾಜ್ ಅವರ ಹೆಸರಿನಲ್ಲಿ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿಗಳು ಇವೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇದು ಚುನಾವಣಾ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ದಿಲೀಪ್ ಕುಮಾರ್ ಎಂಬುವರು ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ವೇಳೆ ನ್ಯಾಯಾಲಯವು ಪ್ರಕಾಶ್ ರಾಜ್ ಅವರಿಗೆ ಎರಡು ಬಾರಿ ಸಮನ್ಸ್ ಜಾರಿಗೊಳಿಸಿ ಹಾಜರಾಗುವಂತೆ ಸೂಚಿಸಿತ್ತು. ಆದರೆ ಅವರು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಪದೇ ಪದೇ ನೀಡಿದ ಸೂಚನೆಗಳನ್ನು ಪಾಲಿಸದ ಕಾರಣ, ನ್ಯಾಯಾಲಯ ಇದೀಗ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ್ದು, ಪ್ರಕರಣದ ಮುಂದಿನ ವಿಚಾರಣೆ ವೇಳೆ ಹೆಚ್ಚಿನ ಬೆಳವಣಿಗೆಗಳು ನಿರೀಕ್ಷಿಸಲಾಗಿದೆ. ಈ ಆರೋಪಗಳ ಕುರಿತು ಪ್ರಕಾಶ್ ರಾಜ್ ಅವರ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.



