No menu items!
19.2 C
Munich
Friday, May 22, 2026

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18ರಂದು ಮತದಾನ

Must read

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18ರಂದು ಮತದಾನ

ನವದೆಹಲಿ/ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕ ಸೇರಿದಂತೆ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ. ಜೂನ್ 18ರಂದು ಮತದಾನ ನಡೆಯಲಿದ್ದು, ಅದೇ ದಿನ ಮತ ಎಣಿಕೆಯೂ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಕರ್ನಾಟಕದ ನಾಲ್ಕು ಸ್ಥಾನಗಳು ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 24 ರಾಜ್ಯಸಭಾ ಸ್ಥಾನಗಳು ಜೂನ್ ಮತ್ತು ಜುಲೈ ತಿಂಗಳಲ್ಲಿ ತೆರವಾಗಲಿವೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಹಲವು ಪ್ರಮುಖ ನಾಯಕರ ಅವಧಿ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯುತ್ತಿದೆ.
ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, ಜೂನ್ 1ರಂದು ಅಧಿಸೂಚನೆ ಹೊರಡಿಸಲಾಗುವುದು. ಜೂನ್ 1ರಿಂದ 8ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇರುತ್ತದೆ. ಜೂನ್ 9ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜೂನ್ 11ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿದೆ.
ಜೂನ್ 18ರಂದು ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಬಳಿಕ ಅದೇ ದಿನ ಮತ ಎಣಿಕೆ ಪ್ರಕ್ರಿಯೆ ನಡೆಯಲಿದ್ದು, ಜೂನ್ 20ರೊಳಗೆ ಸಂಪೂರ್ಣ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.
ರಾಜ್ಯವಾರು ಖಾಲಿಯಾಗುತ್ತಿರುವ ಸ್ಥಾನಗಳ ಪೈಕಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ಗುಜರಾತ್ನಲ್ಲಿ ತಲಾ ನಾಲ್ಕು ಸ್ಥಾನಗಳು ತೆರವಾಗಲಿವೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ತಲಾ ಮೂರು ಸ್ಥಾನಗಳು ಖಾಲಿಯಾಗಲಿದ್ದು, ಜಾರ್ಖಂಡ್ನಲ್ಲಿ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಇದಲ್ಲದೆ, ಮಣಿಪುರ, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳಲ್ಲಿ ತಲಾ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಜಾರ್ಖಂಡ್, ತಮಿಳುನಾಡು ಹಾಗೂ ಮಹಾರಾಷ್ಟ್ರದಲ್ಲಿ ತಲಾ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯುವ ಸಾಧ್ಯತೆಯೂ ಇದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನಿವೃತ್ತಿಯಾಗುತ್ತಿರುವ 22 ರಾಜ್ಯಸಭಾ ಸದಸ್ಯರಲ್ಲಿ 11 ಮಂದಿ ಬಿಜೆಪಿ ಪಕ್ಷದವರಾಗಿದ್ದು, ನಾಲ್ವರು ಕಾಂಗ್ರೆಸ್ ಸದಸ್ಯರಾಗಿದ್ದಾರೆ. ಪ್ರಮುಖ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ದಿಗ್ವಿಜಯ್ ಸಿಂಗ್ ಹಾಗೂ ಎಚ್.ಡಿ. ದೇವೇಗೌಡ ಅವರ ಅವಧಿಯೂ ಇದೇ ವೇಳೆ ಅಂತ್ಯಗೊಳ್ಳಲಿದೆ.
ಮತದಾನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ವಿಶೇಷ ಸೂಚನೆಗಳನ್ನು ನೀಡಿದ್ದು, ಚುನಾವಣಾಧಿಕಾರಿಗಳು ಒದಗಿಸುವ ವಿಶೇಷ ನೇರಳೆ ಬಣ್ಣದ ಸ್ಕೆಚ್ ಪೆನ್ ಅನ್ನು ಮಾತ್ರ ಮತದಾನದ ವೇಳೆ ಬಳಸಬೇಕು ಎಂದು ಸ್ಪಷ್ಟಪಡಿಸಿದೆ.

- Advertisement -spot_img

More articles

- Advertisement -spot_img

Latest article