ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಮಾಫಿ ಸಾಕ್ಷಿಯಾಗಲು ಪ್ರದೂಷ್ ಅರ್ಜಿ; ಆಗಸ್ಟ್ 20ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸುವಂತೆ ಆರೋಪಿ ಪ್ರದೂಷ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು 59ನೇ ಸಿಸಿಎಚ್ ನ್ಯಾಯಾಲಯ ಆಗಸ್ಟ್ 20ಕ್ಕೆ ಮುಂದೂಡಿದೆ.
ಪ್ರದೂಷ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ 59ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು, ವಿಚಾರಣೆ ಪೂರ್ಣಗೊಳಿಸಿ ಆದೇಶ ಕಾಯ್ದಿರಿಸಿದ್ದಾರೆ.
ವಿಚಾರಣೆ ವೇಳೆ ಪ್ರದೂಷ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿರುವ ಅಂಶಗಳ ಬಗ್ಗೆ ಪ್ರದೂಷ್ ಅವರಿಂದಲೇ ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯದ ಗಮನಕ್ಕೆ ತರಲಾಯಿತು.
ಇದಕ್ಕೆ ಪ್ರತಿಯಾಗಿ ನಟ ದರ್ಶನ್ ಪರ ವಕೀಲರು, ಪ್ರದೂಷ್ ಮಾಫಿ ಸಾಕ್ಷಿಯಾದರೆ ಪ್ರಕರಣದಿಂದ ಹೊರಬರಬಹುದು ಎಂಬ ಉದ್ದೇಶದಿಂದ ಈ ರೀತಿಯ ಹೇಳಿಕೆ ನೀಡುತ್ತಿರಬಹುದು. ಅವರಿಗೆ ಯಾರಾದರೂ ಆಮಿಷವೊಡ್ಡಿದ್ದಾರೆಯೇ ಅಥವಾ ಒತ್ತಡ ಹೇರಲಾಗಿದೆಯೇ ಎಂಬುದನ್ನೂ ಪರಿಶೀಲಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದರು.
ಪ್ರದೂಷ್ ಅವರೊಂದಿಗೆ ವಿಚಾರಣೆ ನಡೆಸಿದ ನ್ಯಾಯಾಧೀಶರು, ಮಾಫಿ ಸಾಕ್ಷಿಯಾಗುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಅವರಿಗೆ ಸ್ಪಷ್ಟನೆ ನೀಡಿದರು. ಅಲ್ಲದೆ, ತಾವು ನೀಡುತ್ತಿರುವ ಹೇಳಿಕೆಗಳು ಸತ್ಯವಲ್ಲ ಎಂದು ನಂತರ ಸಾಬೀತಾದರೆ ಜೈಲಿನಲ್ಲೇ ಮುಂದುವರಿಯಬೇಕಾಗುತ್ತದೆ ಎಂಬುದನ್ನೂ ನ್ಯಾಯಾಲಯ ತಿಳಿಸಿತು.
ನ್ಯಾಯಾಧೀಶರ ಪ್ರಶ್ನೆಗೆ ಉತ್ತರಿಸಿದ ಪ್ರದೂಷ್, ತಮ್ಮ ಪರ ವಕೀಲರು ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ತಮ್ಮ ಗಮನಕ್ಕೆ ತಂದಿದ್ದಾರೆ ಎಂದು ತಿಳಿಸಿದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಅಂತಿಮವಾಗಿ ಆದೇಶ ಕಾಯ್ದಿರಿಸಿದ್ದು, ಅರ್ಜಿಯ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮುಂದೂಡಿದೆ.



