ಸತೀಶ್ ಜಾರಕಿಹೊಳಿ ವಿರುದ್ಧ ಫೇಸ್ ಬುಕ್ʼನಲ್ಲಿ ಅಪಪ್ರಚಾರ: ಎರಡು ನಕಲಿ ಖಾತೆಗಳ ವಿರುದ್ಧ FIR
ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಸುಳ್ಳು ಹಾಗೂ ದಾರಿತಪ್ಪಿಸುವ ಮಾಹಿತಿಯನ್ನು ಹರಡಿರುವ ಆರೋಪದ ಹಿನ್ನೆಲೆಯಲ್ಲಿ ಎರಡು ನಕಲಿ ಖಾತೆಗಳ ಆಡಳಿತಗಾರರ ವಿರುದ್ಧ ಬೆಳಗಾವಿ ಜಿಲ್ಲಾ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸತೀಶ್ ಜಾರಕಿಹೊಳಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದ್ರೋಹ ಬಗೆದಿದ್ದಾರೆ ಹಾಗೂ ಅವರ ವಿರುದ್ಧ ಶಾಸಕರ ಸಹಿ ಸಂಗ್ರಹಿಸಿದ್ದಾರೆ ಎಂಬ ಸುಳ್ಳು ಆರೋಪಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಡಲಾಗಿತ್ತು. ಈ ಪೋಸ್ಟ್ಗಳು ವೈರಲ್ ಆಗುತ್ತಿದ್ದಂತೆ ಸಚಿವರ ಬೆಂಬಲಿಗರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಈ ಸಂಬಂಧ ರಾಜಶೇಖರ್ ತಳವಾರ ಎಂಬುವವರು ದೂರು ದಾಖಲಿಸಿದ್ದಾರೆ. ‘ಕರುನಾಡು ಕುರುಬಗೌಡ್ರು’ ಹಾಗೂ ‘ಬಂಡಾಯದ ಧ್ವನಿ’ ಹೆಸರಿನ ಎರಡು ಫೇಸ್ಬುಕ್ ಖಾತೆಗಳ ಮೂಲಕ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರಿನ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಮಾರು 32 ರಿಂದ 37 ಶಾಸಕರ ಸಹಿಗಳನ್ನು ಸಂಗ್ರಹಿಸಿ ಆ ಪಟ್ಟಿಯನ್ನು ಡಿ.ಕೆ. ಶಿವಕುಮಾರ್ ಅವರಿಗೆ ಸತೀಶ್ ಜಾರಕಿಹೊಳಿ ನೀಡಿದ್ದಾರೆ ಎಂಬ ಆರೋಪದೊಂದಿಗೆ ಪೋಸ್ಟ್ಗಳನ್ನು ಪ್ರಕಟಿಸಲಾಗಿದೆ. ಅಲ್ಲದೆ, ಡಿ.ಕೆ. ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ಒಟ್ಟಿಗೆ ಕುಳಿತಿರುವ ಫೋಟೋವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ ಎನ್ನಲಾಗಿದೆ.
ಈ ರೀತಿಯ ಪೋಸ್ಟ್ಗಳ ಉದ್ದೇಶ ಸತೀಶ್ ಜಾರಕಿಹೊಳಿ ಅವರ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರುವುದು ಮಾತ್ರವಲ್ಲದೆ, ವಿವಿಧ ಸಮುದಾಯಗಳ ನಡುವೆ ದ್ವೇಷದ ವಾತಾವರಣ ಸೃಷ್ಟಿಸುವುದಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ.
ವಿಶೇಷವಾಗಿ ಕುರುಬ ಮತ್ತು ವಾಲ್ಮೀಕಿ ಸಮುದಾಯಗಳ ನಡುವೆ ಭಿನ್ನಾಭಿಪ್ರಾಯ ಉಂಟುಮಾಡಿ ಸಾರ್ವಜನಿಕ ಶಾಂತಿ ಕದಡುವ ಹಾಗೂ ಸಾಮಾಜಿಕ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಮಾಜದಲ್ಲಿ ಅಶಾಂತಿ ಮೂಡಿಸುವ ಉದ್ದೇಶದಿಂದ ನಕಲಿ ಖಾತೆಗಳನ್ನು ಬಳಸಿ ಸುಳ್ಳು ಮಾಹಿತಿ ಹರಡುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರಾಜಶೇಖರ್ ತಳವಾರ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದು, ನಕಲಿ ಖಾತೆಗಳ ಹಿಂದಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ.



