No menu items!
19.8 C
Munich
Friday, July 10, 2026

‘ಶಾಶ್ವತ ವಸತಿ ಪ್ರಮಾಣಪತ್ರ’ ನಿಯಮಕ್ಕೆ ಶೋಭಾ ಕರಂದ್ಲಾಜೆ ವಿರೋಧ; ಸಂವಿಧಾನ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ಎಂದು ಅಮಿತ್ ಶಾಗೆ ಪತ್ರ

Must read

‘ಶಾಶ್ವತ ವಸತಿ ಪ್ರಮಾಣಪತ್ರ’ ನಿಯಮಕ್ಕೆ ಶೋಭಾ ಕರಂದ್ಲಾಜೆ ವಿರೋಧ; ಸಂವಿಧಾನ ಹಾಗೂ ರಾಷ್ಟ್ರೀಯ ಭದ್ರತೆಗೆ ಧಕ್ಕೆ ಎಂದು ಅಮಿತ್ ಶಾಗೆ ಪತ್ರ

ಬೆಂಗಳೂರು: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ–2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ನಿಯಮವು ಭಾರತದ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದ್ದು, ದೇಶದ ಆಂತರಿಕ ಭದ್ರತೆಯ ಮೇಲೂ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ಆರೋಪಿಸಿದ್ದಾರೆ.
ಈ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸುದೀರ್ಘ ಪತ್ರ ಬರೆದಿರುವ ಶೋಭಾ ಕರಂದ್ಲಾಜೆ, ರಾಜ್ಯ ಸರ್ಕಾರದ ಆದೇಶದ ಕುರಿತು ತಕ್ಷಣ ಮಧ್ಯಪ್ರವೇಶಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಪತ್ರದಲ್ಲಿ ಅವರು, ಭಾರತದ ಸಂವಿಧಾನವು ದೇಶದ ಎಲ್ಲಾ ನಾಗರಿಕರಿಗೆ ಒಂದೇ ಪೌರತ್ವದ ವ್ಯವಸ್ಥೆಯನ್ನು ಕಲ್ಪಿಸಿದೆ. ಆದರೆ ಯಾವುದೇ ಸಾಂವಿಧಾನಿಕ ಅಥವಾ ಶಾಸನಬದ್ಧ ಅಧಿಕಾರವಿಲ್ಲದೆ ಕರ್ನಾಟಕ ಸರ್ಕಾರ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಮುಂದಾಗಿರುವುದು ಕಾನೂನುಬಾಹಿರ ಕ್ರಮವಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಇಂತಹ ಕ್ರಮವು ಸಂವಿಧಾನದ 14ನೇ ವಿಧಿಯಲ್ಲಿ ಉಲ್ಲೇಖಿಸಿರುವ ಸಮಾನತೆಯ ಹಕ್ಕಿನ ನೇರ ಉಲ್ಲಂಘನೆಯಾಗಿದ್ದು, ದೇಶದ ಒಕ್ಕೂಟದ ತತ್ವಕ್ಕೂ ಧಕ್ಕೆ ಉಂಟುಮಾಡುತ್ತದೆ ಎಂದು ಅವರು ಪತ್ರದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಸ್ಥಳೀಯ ಕಂದಾಯ ಅಧಿಕಾರಿಗಳ ಪರಿಶೀಲನೆ ಹಾಗೂ ಸ್ಥಳೀಯ ದಾಖಲೆಗಳ ಆಧಾರದ ಮೇಲೆ ಶಾಶ್ವತ ವಸತಿ ಪ್ರಮಾಣಪತ್ರ ನೀಡಲು ಅವಕಾಶ ಕಲ್ಪಿಸಲಾಗಿದೆ. ಆದರೆ ಭಾರತೀಯ ಪೌರತ್ವವನ್ನು ಕೇಂದ್ರ ಸರ್ಕಾರದ ಅಧಿಕೃತ ಸಂಸ್ಥೆಗಳ ಮೂಲಕ ಕಡ್ಡಾಯವಾಗಿ ಪರಿಶೀಲಿಸುವ ವ್ಯವಸ್ಥೆ ಇಲ್ಲದಿರುವುದು ಆತಂಕಕಾರಿ ಬೆಳವಣಿಗೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಈ ವ್ಯವಸ್ಥೆಯ ದುರುಪಯೋಗಕ್ಕೆ ಅವಕಾಶವಿದ್ದು, ಅಕ್ರಮವಾಗಿ ದೇಶಕ್ಕೆ ನುಸುಳಿರುವ ವಿದೇಶಿ ಪ್ರಜೆಗಳು ಅಥವಾ ಅಕ್ರಮ ವಲಸಿಗರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಶಾಶ್ವತ ವಸತಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಒಮ್ಮೆ ಈ ಪ್ರಮಾಣಪತ್ರ ಪಡೆದ ಬಳಿಕ, ಅದನ್ನು ಆಧಾರವಾಗಿಟ್ಟುಕೊಂಡು ಸರ್ಕಾರಿ ಸವಲತ್ತುಗಳು, ಶೈಕ್ಷಣಿಕ ಪ್ರವೇಶ ಹಾಗೂ ಉದ್ಯೋಗಾವಕಾಶಗಳನ್ನು ಅಕ್ರಮ ವಲಸಿಗರು ಪಡೆದುಕೊಳ್ಳುವ ಅಪಾಯವಿದೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ದೇಶದಿಂದ ಹೊರಹಾಕುವ ಕೇಂದ್ರ ಸರ್ಕಾರದ ಕಾರ್ಯಾಚರಣೆಗೆ ಹಿನ್ನಡೆಯಾಗಲಿದೆ ಎಂದು ಶೋಭಾ ಕರಂದ್ಲಾಜೆ ತಮ್ಮ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article