No menu items!
20.1 C
Munich
Monday, July 6, 2026

SIR ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಗಂಭೀರ ಆರೋಪ

Must read

SIR ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ ನಡೆಯುತ್ತಿದೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಲ್ಹಾದ ಜೋಶಿ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ನ್ಯಾಯಸಮ್ಮತ ನಿಯಮಗಳನ್ನು ಉಲ್ಲಂಘಿಸಿ ವ್ಯಾಪಕ ಅಕ್ರಮ ಎಸಗಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಿಯೋಗದೊಂದಿಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.ಎಸ್‌ಐಆರ್ ಪ್ರಕ್ರಿಯೆಯಲ್ಲಿ ರಾಜ್ಯ ಸರ್ಕಾರದ ನೇರ ಕುಮ್ಮಕ್ಕಿನಿಂದ ಅಕ್ರಮ ನಡೆಯುತ್ತಿದ್ದು, ಇದರ ವಿರುದ್ಧ ಚುನಾವಣಾ ಆಯೋಗದ ಗಮನ ಸೆಳೆಯಲಾಗಿದೆ ಎಂದು ಅವರು ಹೇಳಿದರು.ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಕ್ರಮವಾಗಿ ವಾಟ್ಸ್‌ಆಪ್‌ ಗುಂಪುಗಳನ್ನು ರಚಿಸಿ ಮಾಹಿತಿ ರವಾನಿಸಲಾಗುತ್ತಿದೆ ಎಂದು ಪ್ರಲ್ಹಾದ ಜೋಶಿ ಆರೋಪಿಸಿದರು. ಕೆಲವು ನಿರ್ದಿಷ್ಟ ಪ್ರದೇಶಗಳು, ಮದರಸಾಗಳು ಹಾಗೂ ಮಸೀದಿಗಳಲ್ಲಿ ಮಾತ್ರ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಕೆಲ ಸಮುದಾಯದ ಮುಖಂಡರ ಮೂಲಕ ಅರ್ಜಿಗಳನ್ನು ಸಂಗ್ರಹಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.ಬೂತ್ ಮಟ್ಟದ ಅಧಿಕಾರಿಗಳು (BLO) ಬೂತ್ ಮಟ್ಟದ ಏಜೆಂಟ್‌ಗಳಿಗೆ (BLA) ಅಗತ್ಯ ಮಾಹಿತಿ ನೀಡುತ್ತಿಲ್ಲ. ಹಲವು ಕಡೆ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ ಎಂದು ಅವರು ದೂರಿದರು.ಈ ಹಿಂದೆ ಹಲವು ಬಾರಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಈಗ ಹಿರಿಯ ಮಟ್ಟದ ನಿಯೋಗದ ಮೂಲಕ ಮತ್ತೊಮ್ಮೆ ದೂರು ಸಲ್ಲಿಸಿ ತುರ್ತು ಕ್ರಮಕ್ಕೆ ಒತ್ತಾಯಿಸಲಾಗಿದೆ ಎಂದು ಜೋಶಿ ಹೇಳಿದರು.ಕೆಲವೆಡೆ ಸ್ಥಳೀಯ ಶಾಸಕರ ಭಾವಚಿತ್ರಗಳನ್ನು ಬೂತ್ ಮಟ್ಟದ ಅಧಿಕಾರಿಗಳೇ ಬಳಸಿಕೊಂಡು ಪ್ರಚಾರ ನಡೆಸುತ್ತಿರುವುದು ಕಂಡುಬಂದಿದೆ. ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ನಡೆದಿರುವ ಎಲ್ಲಾ ಪ್ರದೇಶಗಳ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸಿ, ನಿಯಮಾನುಸಾರ ಮರುಪರಿಶೀಲನೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.ಎಸ್‌ಐಆರ್‌ನ ಮೂಲ ಉದ್ದೇಶವನ್ನು ಬದಿಗೊತ್ತಿ ಬಾಂಗ್ಲಾದೇಶದ ಅಕ್ರಮ ನುಸುಳುಕೋರರನ್ನು ಮತದಾರರ ಪಟ್ಟಿಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ ಎಂದು ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಕ್ರಿಯೆಯ ಬಳಿಕ ಅಲ್ಲಿಂದ ಬಂದಿರುವ ಅಕ್ರಮ ವಲಸಿಗರನ್ನು ಕರ್ನಾಟಕದ ಮತದಾರರ ಪಟ್ಟಿಗೆ ಸೇರಿಸುವ ಸಂಚು ನಡೆಯುತ್ತಿದೆ ಎಂದು ಅವರು ಆರೋಪಿಸಿದರು.ಎಸ್‌ಐಆರ್ ವೇಳೆ ಕುಟುಂಬ ಸದಸ್ಯರ ವಿವರಗಳ ಮ್ಯಾಪಿಂಗ್‌ನಲ್ಲಿ ತಂದೆ-ತಾಯಿ ಸೇರಿದಂತೆ ನಿಗದಿತ ಸಂಬಂಧಗಳನ್ನು ಮಾತ್ರ ದಾಖಲಿಸಬೇಕು. ಆದರೆ ನಿಯಮಬಾಹಿರವಾಗಿ ಇತರ ಸಂಬಂಧಿಕರ ಹೆಸರನ್ನೂ ಸೇರಿಸಲಾಗುತ್ತಿದೆ ಎಂದು ಜೋಶಿ ಹೇಳಿದರು.ಮೋಸದ ಮೂಲಕ ಎಸ್‌ಐಆರ್ ನಡೆದರೆ ಅದು ದೇಶದ ಭದ್ರತೆಗೂ ಧಕ್ಕೆಯಾಗುವ ಸಾಧ್ಯತೆ ಇದೆ. ಎಸ್‌ಐಆರ್‌ನಲ್ಲಿ ಹೆಸರು ತೆಗೆದುಹಾಕಿದರೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಿಗುವುದಿಲ್ಲ ಎಂಬ ರೀತಿಯ ಹೇಳಿಕೆಗಳು ಜನರಲ್ಲಿ ಗೊಂದಲ ಸೃಷ್ಟಿಸುತ್ತಿವೆ. ಇಂತಹ ಹೇಳಿಕೆಗಳ ಹಿಂದಿನ ಉದ್ದೇಶ ಏನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಪ್ರಶ್ನಿಸಿದರು.ಇದಲ್ಲದೆ ಕೆಲ ಪ್ರದೇಶಗಳಲ್ಲಿ ಜನರನ್ನು ಗುಂಪು-ಗುಂಪಾಗಿ ಸೇರಿಸಿ ಅರ್ಜಿಗಳನ್ನು ಭರ್ತಿ ಮಾಡಿಸಲಾಗುತ್ತಿದ್ದು, ಕೆಲವು ವಾರ್ಡ್‌ಗಳಲ್ಲಿ ಸಮಾನಾಂತರವಾಗಿ ಎಸ್‌ಐಆರ್ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಆರೋಪಿಸಿದ ಅವರು, ಈ ಎಲ್ಲ ಅಕ್ರಮಗಳನ್ನು ತಕ್ಷಣವೇ ನಿಲ್ಲಿಸಿ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

- Advertisement -spot_img

More articles

- Advertisement -spot_img

Latest article