ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ: ಹಿಂದಿನ ತನಿಖೆ ನಡೆಸಿದ್ದ 15ಕ್ಕೂ ಹೆಚ್ಚು ಅಧಿಕಾರಿಗಳಿಗೆ ಎಸ್ಐಟಿ ನೋಟಿಸ್!
ದಕ್ಷಿಣ ಕನ್ನಡ: ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಇದೀಗ ಮಹತ್ವದ ಹೆಜ್ಜೆ ಇಟ್ಟಿದ್ದು, ಈ ಹಿಂದೆ ಪ್ರಕರಣದ ತನಿಖೆಯಲ್ಲಿ ಭಾಗಿಯಾಗಿದ್ದ 15ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಿಂದ ಹಿಡಿದು ಸಿಐಡಿ ಮತ್ತು ಸಿಬಿಐ ತನಿಖೆಯವರೆಗೂ ಪ್ರಕರಣವನ್ನು ನಿರ್ವಹಿಸಿದ್ದ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹೌದು, 2012ರಲ್ಲಿ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯಲ್ಲಿ ಇದೀಗ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಹಿಂದಿನ ತನಿಖೆಯ ಪ್ರತಿಯೊಂದು ಹಂತವನ್ನೂ ಪರಿಶೀಲಿಸಲು ಮುಂದಾಗಿರುವ ಎಸ್ಐಟಿ, ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಮಾಹಿತಿ ಸಂಗ್ರಹಿಸಲು ಸಿದ್ಧತೆ ನಡೆಸಿದೆ.
ವಿಶೇಷವಾಗಿ, ಪ್ರಕರಣದ ಆರಂಭಿಕ ತನಿಖೆ ನಡೆಸಿದ್ದ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳಿಂದ ಹಿಡಿದು ನಂತರ ತನಿಖೆ ಕೈಗೊಂಡ ಸಿಐಡಿ ಹಾಗೂ ಸಿಬಿಐ ಹಂತದಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳಿಗೂ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಅಷ್ಟೇ ಅಲ್ಲ, 15ಕ್ಕೂ ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಆರ್ಪಿಸಿ ಸೆಕ್ಷನ್ 160ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಶುಕ್ರವಾರವೇ ಎಸ್ಐಟಿ ಮುಂದೆ ಹಾಜರಾಗಿ ಮಾಹಿತಿ ನೀಡುವಂತೆ ನಿರ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇನ್ನು ಈ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲು ಕಾರಣವೇನು ಅಂದ್ರೆ, ಪ್ರಕರಣದ ಹಿಂದಿನ ತನಿಖೆಯಲ್ಲಿ ಸಂಗ್ರಹಿಸಲಾದ ದಾಖಲೆಗಳು, ಸಾಕ್ಷ್ಯಗಳು ಹಾಗೂ ಮಾಹಿತಿಗಳನ್ನು ಮರುಪರಿಶೀಲಿಸುವುದು ಎಸ್ಐಟಿಯ ಪ್ರಮುಖ ಉದ್ದೇಶವಾಗಿದೆ. ಆರಂಭಿಕ ತನಿಖೆಯಿಂದ ಮುಂದಿನ ಹಂತಗಳವರೆಗೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಎಂಬುದರ ಕುರಿತು ಮಾಹಿತಿ ಪಡೆಯಲು ತಂಡ ಮುಂದಾಗಿದೆ.
2012ರಲ್ಲಿ ಪ್ರಕರಣ ದಾಖಲಾದ ಬಳಿಕ ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದರು. ನಂತರ ಪ್ರಕರಣದ ತನಿಖೆ ವಿವಿಧ ಹಂತಗಳನ್ನು ದಾಟಿ ಸಿಐಡಿ ಹಾಗೂ ಸಿಬಿಐವರೆಗೂ ತಲುಪಿತ್ತು. ಇದೀಗ ಮರು ತನಿಖೆ ಕೈಗೊಂಡಿರುವ ಎಸ್ಐಟಿ, ಹಿಂದಿನ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದ ವಿವರಗಳನ್ನು ಸಂಗ್ರಹಿಸಲು ಅಧಿಕಾರಿಗಳ ವಿಚಾರಣೆ ನಡೆಸಲು ಮುಂದಾಗಿದೆ.
ಹಿಂದಿನ ತನಿಖೆಯಲ್ಲಿ ಯಾವ ದಾಖಲೆಗಳನ್ನು ಸಂಗ್ರಹಿಸಲಾಗಿತ್ತು? ತನಿಖೆಯ ವಿವಿಧ ಹಂತಗಳಲ್ಲಿ ಯಾವ ಕ್ರಮಗಳನ್ನು ಅನುಸರಿಸಲಾಗಿತ್ತು? ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವ ಮಾಹಿತಿಗಳು ಲಭ್ಯವಾಗಿದ್ದವು? ಎಂಬ ವಿಚಾರಗಳ ಬಗ್ಗೆ ಎಸ್ಐಟಿ ಸ್ಪಷ್ಟತೆ ಪಡೆಯುವ ನಿರೀಕ್ಷೆಯಿದೆ.
ಇದೇ ವೇಳೆ ಹಿಂದಿನ ತನಿಖೆಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ ನೋಟಿಸ್ ನೀಡಿರುವುದರಿಂದಲೇ ಅವರ ವಿರುದ್ಧ ತಪ್ಪು ಅಥವಾ ಅಕ್ರಮ ಸಾಬೀತಾಗಿದೆ ಎಂದು ಅರ್ಥವಲ್ಲ. ಪ್ರಕರಣದ ಮರು ತನಿಖೆಗೆ ಅಗತ್ಯವಿರುವ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯ ಭಾಗವಾಗಿ ಅವರನ್ನು ವಿಚಾರಣೆಗೆ ಕರೆಯಲಾಗಿದೆ.



