ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ: ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸರ ವಶಕ್ಕೆ!
ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾಗಿರುವ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಕುರಿತ ಪ್ರತಿಭಟನಾ ಸಭೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ತಮಿಳಾಗ ವೆಟ್ರಿ ಕಳಗಂ (TVK) ಪಕ್ಷ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಂಜಾವೂರಿನಲ್ಲಿ ಡಿಎಂಕೆ ಆಯೋಜಿಸಿದ್ದ ರೈತರ ಪ್ರತಿಭಟನಾ ಸಭೆಯಲ್ಲಿ ಕಾವೇರಿ ನೀರಿನ ಬಿಕ್ಕಟ್ಟಿನ ಕುರಿತು ಉದಯನಿಧಿ ಸ್ಟಾಲಿನ್ ಮಾತನಾಡುತ್ತಿದ್ದರು. ಈ ವೇಳೆ ಅವರು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, “ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು” ಎಂದು ದ್ವಂದ್ವಾರ್ಥ ಮೂಡಿಸುವ ರೀತಿಯಲ್ಲಿ ಹೇಳಿಕೆ ನೀಡಿರುವುದಾಗಿ ಆರೋಪಿಸಲಾಗಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಉದಯನಿಧಿ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಟಿವಿಕೆ ಪಕ್ಷ ಹಾಗೂ ಅದರ ಮಹಿಳಾ ಘಟಕದ ನಾಯಕಿಯರು ತಂಜಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೂ (NCW) ದೂರು ಸಲ್ಲಿಸಿದ್ದಾರೆ.
ಮಹಿಳೆಯರ ಬಗ್ಗೆ ಅವಹೇಳನಕಾರಿ ಹಾಗೂ ಕೀಳುಮಟ್ಟದ ಹೇಳಿಕೆ ನೀಡಿರುವುದು ಸಾರ್ವಜನಿಕ ಹುದ್ದೆಯಲ್ಲಿರುವ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಟಿವಿಕೆ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೂರು ದಾಖಲಾದ ನಂತರ ಟಿವಿಕೆ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ, ನೀಲಂಗರೈನಲ್ಲಿರುವ ಉದಯನಿಧಿ ಸ್ಟಾಲಿನ್ ನಿವಾಸದ ಬಳಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಬಳಿಕ ತಂಜಾವೂರು ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಉದಯನಿಧಿ ಅವರ ಹೇಳಿಕೆಯನ್ನು ತಮಿಳುನಾಡು ಬಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಖಂಡಿಸಿದ್ದು, ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿವೆ.



