ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಬಿಗ್ ಶಾಕ್: ಜಾಮೀನು ರದ್ದು, 2 ವಾರಗಳಲ್ಲಿ ಶರಣಾಗುವಂತೆ ಮಹತ್ವದ ಆದೇಶ

Must read

ವಿನಯ್ ಕುಲಕರ್ಣಿಗೆ ಸುಪ್ರೀಂನಿಂದ ಬಿಗ್ ಶಾಕ್: ಜಾಮೀನು ರದ್ದು, 2 ವಾರಗಳಲ್ಲಿ ಶರಣಾಗುವಂತೆ ಮಹತ್ವದ ಆದೇಶ

 

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಹಿನ್ನಡೆಯಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಷರತ್ತುಬದ್ಧ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು, ಎರಡು ವಾರಗಳೊಳಗೆ ಶರಣಾಗುವಂತೆ ಸೂಚಿಸಿದೆ. ಈ ಬೆಳವಣಿಗೆಯಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಅನರ್ಹತೆಯ ಪ್ರಶ್ನೆ ಎದುರಾಗಿದೆ.

ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠವು ವಿನಯ್ ಕುಲಕರ್ಣಿಗೆ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮತ್ತು ಕೊಲೆಯಾದ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠವು ಇದೀಗ ಜಾಮೀನು ರದ್ದುಪಡಿಸಿ ಆದೇಶ ಹೊರಡಿಸಿದೆ.

ಸುಪ್ರೀಂ ಕೋರ್ಟ್ ಆದೇಶದಲ್ಲೇನಿದೆ?

ಹೈಕೋರ್ಟ್ ನೀಡಿದ್ದ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಗುರುನಾಥ್ ಗೌಡ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳೊಳಗೆ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.

ಯೋಗೇಶ್ ಗೌಡ ಕೊಲೆ ಪ್ರಕರಣದ ಹಿನ್ನೆಲೆ

2016ರ ಜೂನ್ 15ರಂದು ಧಾರವಾಡದ ಸಪ್ತಾಪುರದಲ್ಲಿರುವ ಜಿಮ್ನಲ್ಲಿ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರನ್ನು ದುಷ್ಕರ್ಮಿಗಳ ತಂಡ ಬರ್ಬರವಾಗಿ ಹತ್ಯೆ ಮಾಡಿತ್ತು. ಆರಂಭದಲ್ಲಿ ಈ ಸಂಬಂಧ ಧಾರವಾಡ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿತ್ತು.

ತನಿಖೆ ಕೈಗೊಂಡಿದ್ದ ಸಿಬಿಐ, ಕೊಲೆಯ ಹಿಂದೆ ರಾಜಕೀಯ ದ್ವೇಷ ಮತ್ತು ಸಂಚು ಇರುವ ಆರೋಪಗಳನ್ನು ಮುಂದಿಟ್ಟಿತ್ತು. ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಪ್ರಮುಖ ಆರೋಪಿಯಾಗಿದ್ದಾರೆ.

2026ರ ಏಪ್ರಿಲ್ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ ಪ್ರಕರಣದ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ನ ವಿಭಾಗೀಯ ಪೀಠವು 2026ರ ಜುಲೈ 31ರಂದು ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಮತ್ತು ಯೋಗೇಶ್ ಗೌಡ ಅವರ ಸಹೋದರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.

2026ರ ಅಕ್ಟೋಬರ್ 27ರಂದು ಎರಡೂ ಕಡೆಯ ವಾದಗಳನ್ನು ಆಲಿಸಿದ್ದ ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಅಂತಿಮ ಆದೇಶ ಪ್ರಕಟಿಸಿರುವ ನ್ಯಾಯಾಲಯ, ವಿನಯ್ ಕುಲಕರ್ಣಿ ಅವರ ಜಾಮೀನನ್ನು ರದ್ದುಗೊಳಿಸಿ ಎರಡು ವಾರಗಳಲ್ಲಿ ಶರಣಾಗುವಂತೆ ಸೂಚಿಸಿದೆ.

- Advertisement -spot_img

More articles

- Advertisement -spot_img

Latest article