ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನು ಮಂಜೂರು
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ.
ಹೈಕೋರ್ಟ್, ₹5 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಸಲ್ಲಿಸುವ ಷರತ್ತಿನೊಂದಿಗೆ ಜಾಮೀನು ನೀಡಿದೆ. ಜೊತೆಗೆ, ಧಾರವಾಡ ಜಿಲ್ಲೆಗೆ ಪ್ರವೇಶ ನಿರ್ಬಂಧ ವಿಧಿಸುವಂತೆ ಮಾಡಲಾಗಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯ ವಿನಯ್ ಕುಲಕರ್ಣಿಗೆ ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಅವರು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿ ಕಾನೂನು ಹೋರಾಟ ಮುಂದುವರಿಸಿದ್ದರು.
ಈ ಪ್ರಕರಣದ ವಿಚಾರಣೆಯನ್ನು ರಾಜಕೀಯ ವಲಯವೂ ತೀವ್ರ ಕುತೂಹಲದಿಂದ ಗಮನಿಸುತ್ತಿತ್ತು. ಹೈಕೋರ್ಟ್ ಸೆಷನ್ಸ್ ನ್ಯಾಯಾಲಯದ ಶಿಕ್ಷೆಯನ್ನು ಎತ್ತಿಹಿಡಿದಿದ್ದರೆ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೂ ಸಂಕಷ್ಟ ಎದುರಾಗುವ ಸಾಧ್ಯತೆ ಇತ್ತು.
ಆದರೆ ಹೈಕೋರ್ಟ್ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ, ವಿನಯ್ ಕುಲಕರ್ಣಿಗೆ ತಾತ್ಕಾಲಿಕ ನೆಮ್ಮದಿ ದೊರೆತಿದ್ದು, ಅವರ ಶಾಸಕ ಸ್ಥಾನಕ್ಕೆ ತಕ್ಷಣದ ಯಾವುದೇ ಧಕ್ಕೆಯಾಗದಂತಾಗಿದೆ. ಇದರೊಂದಿಗೆ ಅವರು ಮತ್ತೆ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗುವ ಸಾಧ್ಯತೆ ಹೆಚ್ಚಿದೆ.



