ನಾಲ್ಕು ವರ್ಷಗಳ ಕಾಯುವಿಕೆಗೆ ಕೊನೆಗೂ ಮುಕ್ತಿ? ಜಿಪಂ, ತಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್

Must read

ನಾಲ್ಕು ವರ್ಷಗಳ ಕಾಯುವಿಕೆಗೆ ಕೊನೆಗೂ ಮುಕ್ತಿ? ಜಿಪಂ, ತಾಪಂ ಚುನಾವಣೆಗೆ ಮುಹೂರ್ತ ಫಿಕ್ಸ್

 

ಬೆಂಗಳೂರು: ಕಳೆದ 2022ರಿಂದ ವಿಳಂಬವಾಗಿದ್ದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದಾಗಿ ಮುಂದೂಡಿಕೆಯಾಗಿದ್ದ ಚುನಾವಣೆಗೆ ರಾಜ್ಯ ಸರ್ಕಾರ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಿಸಿದೆ. ಇದರ ಬೆನ್ನಲ್ಲೇ 2027ರ ಜನವರಿಯಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರಾಜ್ಯದ 1,101 ಜಿಲ್ಲಾ ಪಂಚಾಯಿತಿ ಹಾಗೂ 3,580 ತಾಲೂಕು ಪಂಚಾಯಿತಿ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಮುಂದಿನ ವರ್ಷದ ಜನವರಿಯಲ್ಲಿ ಮತಪತ್ರದ ಮೂಲಕ ಚುನಾವಣೆ ನಡೆಯಲಿದ್ದು, ಶೀಘ್ರದಲ್ಲೇ ರಾಜ್ಯ ಚುನಾವಣಾ ಆಯೋಗ ಅಧಿಕೃತ ವೇಳಾಪಟ್ಟಿ ಪ್ರಕಟಿಸಲಿದೆ ಎಂದು ತಿಳಿಸಿದ್ದಾರೆ.

ಇನ್ನು ಮತದಾನಕ್ಕೆ ಯಾವ ಮತದಾರರ ಪಟ್ಟಿಯನ್ನು ಬಳಸಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಚುನಾವಣಾ ಆಯೋಗಕ್ಕೆ ಸೇರಿದೆ. ಹಳೆಯ ಮತದಾರರ ಪಟ್ಟಿಯನ್ನೇ ಬಳಸುವಂತೆ ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಆದರೆ, ಈ ಕುರಿತು ಅಂತಿಮ ತೀರ್ಮಾನವನ್ನು ರಾಜ್ಯ ಚುನಾವಣಾ ಆಯೋಗವೇ ಕೈಗೊಳ್ಳಲಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಅಂದಹಾಗೆ, ಸ್ಥಳೀಯ ಸಂಸ್ಥೆಗಳ ಅಧಿಕಾರಾವಧಿ 2022ರಲ್ಲೇ ಮುಕ್ತಾಯಗೊಂಡಿದ್ದರೂ ಹಲವು ಕಾರಣಗಳಿಂದ ಚುನಾವಣೆ ನಡೆಸಲು ಸಾಧ್ಯವಾಗಿರಲಿಲ್ಲ. ಹಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲಾಗಿತ್ತು. ಕೆಲವು ಗ್ರಾಮೀಣ ಪ್ರದೇಶಗಳು ಸಮೀಪದ ಪುರಸಭೆ, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ವ್ಯಾಪ್ತಿಗೆ ಸೇರ್ಪಡೆಯಾಗಿದ್ದವು. ಹೀಗಾಗಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಭೌಗೋಳಿಕ ಗಡಿಗಳನ್ನು ಮರುನಿಗದಿಪಡಿಸುವ ಅನಿವಾರ್ಯತೆ ಎದುರಾಗಿತ್ತು.

ಹಿಂದಿನ ಸರ್ಕಾರದ ಅವಧಿಯಲ್ಲೇ ಚುನಾವಣೆ ನಡೆಯಬೇಕಿತ್ತಾದರೂ, ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇದೀಗ ಕ್ಷೇತ್ರ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿಪಡಿಸುವ ಸರ್ಕಾರದ ಜವಾಬ್ದಾರಿ ಪೂರ್ಣಗೊಂಡಿದೆ. ಮತಪತ್ರದ ಮೂಲಕ ಚುನಾವಣೆ ನಡೆಸುವ ಕುರಿತು ಈಗಾಗಲೇ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದ್ದು, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೂ ಶಿಫಾರಸು ಮಾಡಲಾಗಿದೆ.

ಚುನಾವಣೆಯ ದಿನಾಂಕ, ನೀತಿ ಸಂಹಿತೆ ಹಾಗೂ ಅಧಿಕೃತ ವೇಳಾಪಟ್ಟಿ ಪ್ರಕಟಿಸುವ ಜವಾಬ್ದಾರಿ ಇದೀಗ ರಾಜ್ಯ ಚುನಾವಣಾ ಆಯೋಗದ ಮೇಲಿದೆ. ಆಯೋಗ ದಿನಾಂಕ ಘೋಷಿಸಿದ ಬಳಿಕ ಮತಪತ್ರದ ಮೂಲಕವೇ ಚುನಾವಣೆ ನಡೆಯಲಿದೆ ಎಂದು ಸಚಿವ ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಇನ್ನು ಅಂತಿಮ ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯ ಆಕಾಂಕ್ಷಿಗಳು ಟಿಕೆಟ್ಗಾಗಿ ತಮ್ಮ ತಮ್ಮ ನಾಯಕರ ಬೆನ್ನುಬಿದ್ದಿದ್ದು, ಗ್ರಾಮೀಣ ಭಾಗದಲ್ಲಿ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ.

- Advertisement -spot_img

More articles

- Advertisement -spot_img

Latest article